
(ನ್ಯೂಸ್ ಕಡಬ) newskadaba.com, ನ.27: ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ನ.30ರಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 5ರವರೆಗೆ ನಡೆಯಲಿರುವ ಈ ಮೇಳದಲ್ಲಿ 360ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದ್ದು, ಈಗಾಗಲೇ 10,697 ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.26ರ ಸಂಜೆವರೆಗಿನ ಮಾಹಿತಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಿಂದ 4,540, ಉಡುಪಿ ಜಿಲ್ಲೆಯಿಂದ 1,200, ಮಂಡ್ಯದಿಂದ 358, ಉತ್ತರ ಕನ್ನಡದಿಂದ 276 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಹೊಸದಾಗಿ ಪದವಿ ಪಡೆದ ಅಭ್ಯರ್ಥಿಗಳು ಹಾಗೂ ಅನುಭವ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೂ ಒಂದೇ ವೇದಿಕೆಯಲ್ಲಿ ವಿವಿಧ ಕಂಪನಿಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನ ಎದುರಿಸಲು ಅವಕಾಶ ಕಲ್ಪಿಸಲಾಗಿದೆ. ಯುವನಿಧಿ ಯೋಜನೆಯ ಫಲಾನುಭವಿಗಳಿಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8,000 ಯುವನಿಧಿ ಫಲಾನುಭವಿಗಳಿದ್ದಾರೆ ಎಂದು ತಿಳಿಸಿದರು.
ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ಮಂಗಳೂರು ರೈಲು ನಿಲ್ದಾಣದಿಂದ ಸೈಂಟ್ ಅಲೋಶಿಯಸ್ ಕಾಲೇಜಿನವರೆಗೆ ಫೀಡರ್ ಬಸ್ ಸೇವೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಅಭ್ಯರ್ಥಿಗಳು ಹಾಗೂ ಉದ್ಯೋಗದಾತರಿಗೆ ಉಚಿತ ಊಟ, ಕುಡಿಯುವ ನೀರು, ಶೌಚಾಲಯ ಮತ್ತು ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.ಸುದ್ದಿಗೋಷ್ಠಿಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕರ್ಭಾರಿ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.




