
(ನ್ಯೂಸ್ ಕಡಬ) newskadaba.com, ನ .28 . ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಭರವಸೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮಹಿಳೆಯರಿಗೆ ಅವರ ಹಕ್ಕು ದೊರಕಿಸುವ ಹಾದಿಯಲ್ಲಿ ಎದುರಾಗುವ ಎಲ್ಲ ಅಡೆತಡೆಗಳನ್ನು ನಿವಾರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಶನಿವಾರ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಕಿರು ವಿಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ, ಮಹಿಳಾ ಮೀಸಲಾತಿಗಾಗಿ ಹಲವು ದಶಕಗಳಿಂದ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. ಈ ಹೋರಾಟದಲ್ಲಿ ತಾವೂ ಭಾಗಿಯಾಗಿದ್ದು, ಮಹಿಳೆಯರಿಗೆ ನೀಡಿದ ಭರವಸೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮತ್ತೆ ಮುಂದಿಡಲು ಸಿದ್ಧತೆ ನಡೆಸಿರುವ ಹಾಗೂ ಇತರ ಪಕ್ಷಗಳ ಬೆಂಬಲ ಪಡೆಯಲು ಶ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿಯ ಈ ಹೇಳಿಕೆ ಮಹತ್ವ ಪಡೆದಿದೆ.ಮಹಿಳಾ ಮೀಸಲಾತಿ ಕಾಯ್ದೆಯನ್ನು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯೊಂದಿಗೆ ಜೋಡಿಸಿರುವ ಕೇಂದ್ರ ಸರ್ಕಾರ, 2029ರ ಲೋಕಸಭೆ ಚುನಾವಣೆಯ ವೇಳೆಗೆ ಕ್ಷೇತ್ರಗಳ ಮರುವಿಂಗಡಣೆಯ ಬಳಿಕ ರೂಪುಗೊಳ್ಳುವ ದೊಡ್ಡ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶ ಹೊಂದಿದೆ.
ಆದರೆ, ಏಪ್ರಿಲ್ನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಸೋಲಿಸಿದ್ದ ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಈಗಿರುವ 545 ಲೋಕಸಭಾ ಸ್ಥಾನಗಳಲ್ಲಿಯೇ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.ಮಹಿಳಾ ಮೀಸಲಾತಿ ಜಾರಿಗೆ ಎದುರಾಗುವ ಅಡೆತಡೆಗಳನ್ನು ನಿವಾರಿಸುವುದಾಗಿ ಪ್ರಧಾನಿ ಮೋದಿ ಮತ್ತೊಮ್ಮೆ ಭರವಸೆ ನೀಡಿದ್ದು, ಈ ವಿಚಾರದಲ್ಲಿ ಸರ್ಕಾರದ ಸಂಕಲ್ಪ ದೃಢವಾಗಿದೆ ಎಂದು ಹೇಳಿದ್ದಾರೆ.




