(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.13. ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮದ ಹೊಣೆ ವಹಿಸಿದರು. ನೆಹರು ಮೈದಾನದಲ್ಲಿ ವೇದಿಕೆ ಸಿದ್ಧತೆಯನ್ನೊಳಗೊಂಡಂತೆ, ಉಪಹಾರ, ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಸವಿವರ ಚರ್ಚೆ ನಡೆಯಿತು.
ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಿ; ಪ್ಲಾಸ್ಟಿಕ್ ಧ್ವಜ ಬಳಕೆ ಮತ್ತು ಮಾರಾಟ ಮಾಡುವುದು ಧ್ವಜ ನೀತಿಯ ಉಲ್ಲಂಘನೆ ಎಂದು ಅಪರ ಜಿಲ್ಲಾಧಿಕಾರಿಗಳು ಸ್ಪಷ್ಟ ಪಡಿಸಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಹಬ್ಬದಲ್ಲಿ ಪಾಲ್ಗೊಳ್ಳಬೇಕೆಂಬ ವಿನಂತಿಯನ್ನು ಮಾಡಲಾಯಿತು.
ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚನೆ ನೀಡಲಾಯಿತು. ಡಿಸಿಪಿ ಹನುಮಂತರಾಯ, ಅಡಿಷನಲ್ ಎಸ್ ಪಿ ಸಜಿತ್ ವಿ ಜೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.