(ನ್ಯೂಸ್ ಕಡಬ) newskadaba.com ಮಂಗಳೂರು, ಜು.23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಗೃಹ ಇಲಾಖೆ ಜಿಲ್ಲಾ ಎಸ್ಪಿ ಮತ್ತು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಹೀಗಾಗಿ ಸಾರ್ವತ್ರಿಕ ವರ್ಗಾವಣೆ ನಡೆಸಲು ಇಲಾಖೆಯಿಂದ ಪಟ್ಟಿ ತಯಾರಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಮಂಗಳೂರಿನಲ್ಲಿ ನಡೆದ ಗಲಭೆ ಸಂಬಂಧ ಹಿರಿಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದರು. ಆದರೂ ಗಲಭೆಯನ್ನು ನಿಲ್ಲಿಸಲು ಸಾಧ್ಯವಾಗಿರಲಿಲ್ಲ. ಡಿಜಿಪಿ ಆರ್.ಕೆ. ದತ್ತಾ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್ ಜಿಲ್ಲೆಗೆ ಆಗಮಿಸಿ ಖುದ್ದು ಇಲ್ಲಿನ ವಸ್ತು ಸ್ಥಿತಿಯನ್ನು ಅಧ್ಯಯನ ಮಾಡಿದ್ದರು. ಹೀಗಿದ್ದರೂ ಗಲಭೆ ಮುಂದುವರಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ ನಿವೃತ್ತ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದೀಗ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿ ಮತ್ತು ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿ, ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ವರ್ಗಾವಣೆ ಸಾಧ್ಯತೆ ನಿಚ್ಚಳವಾಗಿದೆ. ಶೀಘ್ರದಲ್ಲೇ ದ ಕ ಜಿಲ್ಲೆಯಾದ್ಯಂತ ಹಿರಿಯ ಅಧಿಕಾರಿಗಳು ಸೇರಿದಂತೆ ಪೊಲೀಸರ ವರ್ಗಾವಣೆ ದಟ್ಟವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ನಡುವೆ ಜುಲೈ 14ರಂದು ಡಿಜಿಪಿ ಆರ್ ಕೆ ದತ್ತಾ ಮಂಗಳೂರಿನಲ್ಲಿ ಬೀಡುಬಿಟ್ಟು ಇಲ್ಲಿ ನಾನು ಧರ್ಮದ ಮುಖಂಡರೊಂದಿಗೆ, ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದರು. ಜಿಲ್ಲೆಯ ಸ್ಥಿತಿಗತಿ, ಪೊಲೀಸ್ ಇಲಾಖೆ ಕಾರ್ಯನಿರ್ವಹಣೆ ಬಗ್ಗೆ ಹಿರಿಯ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡಿದ್ದರು.
ಇದನ್ನೆಲ್ಲವನ್ನೂ ಸಂಗ್ರಹಿಸಿ ವರದಿ ರೂಪದಲ್ಲಿ ರಾಜ್ಯ ಸರಕಾರಕ್ಕೆ ಈಗಾಗಲೇ ಸಲ್ಲಿಸಿದ್ದಾರೆ. ಇದು ಕೂಡಾ ಇಲಾಖೆಯಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಗಲಿದೆ. ವರ್ಗಾವಣೆ ಪ್ರಾರಂಭವಾದಲ್ಲಿ ದಕ್ಷಿಣ ಕನ್ನಡದಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಗಳು ಇನ್ಮುಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಳ್ಳಲಿದ್ದಾರೆ.