ಲಿಂಗಾನುಪಾತ ತಡೆಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಕಟ್ಟುನಿಟ್ಟಿನ ಕ್ರಮ ► ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಲಿಂಗಾನುಪಾತವನ್ನು ಸರಿಪಡಿಸಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮೂಲಕ ಮುಂದಿನ ಒಂದು ವರ್ಷದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆ ಕುರಿತು ವೈದ್ಯಾಧಿಕಾರಿಗಳಿಗೆ, ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕಿಯರಿಗೆ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಲಿಂಗಾನುಪಾತಕ್ಕೆ ಹಲವು ಕಾರಣಗಳಿದ್ದು, ಸಮಾನತೆ ಮನೆಯಿಂದಲೇ ಆರಂಭವಾಗಬೇಕಾಗಿದೆ‌. ಹೆಣ್ಮಕ್ಕಳ ಬಾಲ್ಯ ಅರಳುವುದು ಇಲ್ಲಿಂದಲೇ ಎಂದ ಅವರು, ಗರ್ಭಿಣಿಯರ ಶುಶ್ರೂಷೆ, ಅಪೌಷ್ಠಿಕತೆ ನಿವಾರಣೆ, ಶುಚಿತ್ವ ಕುರಿತ ಜಾಗೃತಿ ಎಲ್ಲರಲ್ಲೂ ಅಗತ್ಯವಾಗಿದೆ ಎಂದರು. ಉದ್ಘಾಟನಾ ಭಾಷಣ ಮಾಡಿದ ಜಿಲ್ಲಾ ಪಂಚಾಯತ್‍ನ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸೆಲ್ವಮಣಿ ಆರ್., ವಿಶ್ವ ಆರೋಗ್ಯ ಸಂಸ್ಥೆಯ ನಿಯಮಾನುಸಾರ ಕಳೆದ ಸಾಲಿಗೆ ಹೋಲಿಸಿದರೆ ಈ ಸಾಲಿನಲ್ಲಿ ಲಿಂಗಾನುಪಾತ ಜಿಲ್ಲೆಯಲ್ಲಿ ಕೆಳಗಿಳಿದಿದ್ದು, ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದರು.

Also Read  ತಾಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು...!

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷರಾದ ಜನಾರ್ಧನ ಗೌಡ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿತಾ ಹೇಮನಾಥ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಲ್ಲನಗೌಡ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ| ಎಂ. ರಾಮಚಂದ್ರ ಬಾಯರಿ ಪಿಪಿಎನ್‍ಡಿಟಿ ಕಾಯ್ದೆ ಕುರಿತು ಮಾಹಿತಿ ನೀಡಿದರು. ವೆನ್ ಲಾಕ್ ಆಸ್ಪತ್ರೆಯ ಆರ್ ಎಂ. ಡಾ| ಸಲ್ಡಾನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶಿವರಾಮಯ್ಯ ವೇದಿಕೆಯಲ್ಲಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸುಂದರ ಪೂಜಾರಿ ಸ್ವಾಗತಿಸಿದರು. ಉಸ್ಮಾನ್ ವಂದಿಸಿದರು.

Also Read  ಗಂಟಲಲ್ಲಿ ಗೋಲಿಬಜೆ ಸಿಲುಕಿ ವ್ಯಕ್ತಿ ಮೃತ್ಯು

error: Content is protected !!
Scroll to Top