(ನ್ಯೂಸ್ ಕಡಬ) newskadaba.com ಕಡಬ, ಮಾ.31. ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಕಡಬದ ಕೋಡಿಂಬಾಳ ಗ್ರಾಮದ ಮಡ್ಯಡ್ಕ ಜನತಾ ಕಾಲನಿಯ ನಿವಾಸಿಗಳು ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ ಎಂದು ರಾಜಕೀಯ ಪಕ್ಷಗಳ ಪ್ರಮುಖರಿಗೆ ಸಂದೇಶ ರವಾನಿಸಿದ್ದಾರೆ.
ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಿಸಬೇಕು, ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಸಮಸ್ಯೆ ಬಗೆಹರಿಸಬೇಕು ಹಾಗೂ ಕಾಲನಿಯ ನಿವಾಸಿಗಳ ಬಾಕಿ ಇರುವ ಕುಡಿಯುವ ನೀರಿನ ಬಿಲ್‍ನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎನ್ನುವ ಬೇಡಿಕೆಯನ್ನು ಇರಿಸಲಾಗಿದೆ. ಕಳೆದ 25 ವರ್ಷಗಳಿಂದ ಕಾಲನಿಗೆ ಯಾವುದೇ ರೀತಿಯ ಸೌಕರ್ಯಗಳನ್ನು ಜನಪ್ರತಿನಿಧಿಗಳು ನೀಡಿಲ್ಲ. ಕಾಲನಿಯ ಅಭಿವೃದ್ಧಿಯ ದೃಷ್ಟಿಯಿಂದ ಯಾವುದೇ ಕೆಲಸ ಕಾರ್ಯಗಳು ನಡೆದಿಲ್ಲ. ಆದುದರಿಂದ ನಾವು ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ. ಚುನಾವಣೆಗೆ ಮೊದಲು ನಮ್ಮ ಬೇಡಿಕೆಗಳು ಈಡೇರಿದಲ್ಲಿ ಶಾಂತಿಯುತವಾಗಿ ಮತದಾನದಲ್ಲಿ ಭಾಗವಹಿಸುತ್ತೇವೆ ಎಂದು ಆಗ್ರಹಿಸಿ ಕಾಲನಿಯ ನಿವಾಸಿಗಳು ಬ್ಯಾನರ್ ಅಳವಡಿಸಿದ್ದಾರೆ.