ಡೆಂಗ್ಯು ನಿಯಂತ್ರಣಕ್ಕೆ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ➤ ಉಸ್ತುವಾರಿ ಕಾರ್ಯದರ್ಶಿ: ಬಿ.ಎಚ್. ಅನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಜಿಲ್ಲೆಯಲ್ಲಿ ಕಂಡು ಬಂದಿರುವ ಡೆಂಗ್ಯು ರೋಗ ನಿಯಂತ್ರಣಕ್ಕೆ ಅಗತ್ಯ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್ ಸೂಚಿಸಿದ್ದಾರೆ.


ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಈಗಾಗಲೇ ನಡೆಸುತ್ತಿರುವ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಇದರಲ್ಲಿ ಯಾವುದೇ ಲೋಪವನ್ನು ಸಹಿಸಲಾಗದು. ಆರೋಗ್ಯ ಇಲಾಖೆಯು ಮತ್ತು ನಗರಪಾಲಿಕೆ ಯುದ್ದೋಪಾಧಿಯಲ್ಲಿ ತೊಡಗಿಕೊಳ್ಳುವಂತೆ ಅವರು ನಿರ್ದೇಶಿಸಿದರು.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಡೆಂಗ್ಯು ನಿಯಂತ್ರಣದಲ್ಲಿ ಜಿಲ್ಲಾಡಳಿತವನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಲಾಗಿದೆ.

ಡೆಂಗ್ಯು ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾ ಇಡಲು ನಿರ್ಲಕ್ಷ್ಯ ತೋರಿದ್ದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.ಸರ್ಕಾರಿ ಯೋಜನಾ ಕಾರ್ಯಗಳ ಬಗ್ಗೆ ಎಲ್ಲಾ ತಾಲೂಕುಗಳ ತಹಶೀಲ್ದಾರರು ನಿಗಾ ವಹಿಸಿ ಕಾರ್ಯ ನಿರ್ವಹಿಸಿಬೇಕು. ಯಾವುದೇ ಸರ್ಕಾರಿ ಯೋಜನೆಗಳನ್ನು ವಿಳಂಭ ಮಾಡದೇ ಸಕಾಲದಲ್ಲಿ ನಿರ್ವಹಿಸಿಬೇಕು. ಇದರಿಂದ ಯಾವುದೇ ಕೆಲಸ ಕಾರ್ಯಗಳಿಗೂ ಅಡಚಣೆಯಾಗುವುದಿಲ್ಲ ಸಾರ್ವಜನಿಕರಿಗೆ ಸರಿಯಾದ ಸಮಯದಲ್ಲಿ ಸ್ಪಂದನೆ ದೊರಕುತ್ತದೆ ಎಂದು ತಿಳಿಸಿದರು.

Also Read  ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ 30ಕ್ಕೂ ಅಧಿಕ ಮಂದಿ ವಿರುದ್ದ ಕೇಸು ದಾಖಲು- ಇಬ್ಬರ ಬಂಧನ

ದರ್ಖಾಸು ಪೋಡಿಗಳ ಸಮಸ್ಯೆಗಳ ನಿವಾರಣೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕಂದಾಯ ಇಲಾಖೆ ಮತ್ತು ಸರ್ವೇ ಇಲಾಖೆಗೆ ಸೂಚಿಸಿದ ಅವರು, ಪಡಿತರ ಚೀಟಿ ತ್ವರಿತ ವಿತರಣೆಗೆ ಕ್ರಮ ಕೈಗೊಳ್ಳಬೇಕು. ದ.ಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಇನ್ನಷ್ಟು ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಲ್ಲಿ ದ.ಕ ಜಿಲೆಯಲ್ಲಿ 32 ಗ್ರಾಮಗಳಿಗೆ ಅನುಮೋದನೆ ದೊರಕಿದ್ದು ಪ್ರತೀ ಗ್ರಾಮಗಳಿಗೆ ತಲಾ ರೂ. 100 ಲಕ್ಷ ಮಂಜೂರು ಮಾಡಲಾಗಿದೆ. ಎಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳು ತಿಳಿಸಿದರು.


ಸೇತುವೆಗಳ ಪರಿಶೀಲನೆ : ಜಿಲ್ಲೆಯಲ್ಲಿರುವ ಎಲ್ಲಾ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಗ್ರಾಮೀಣ ರಸ್ತೆಗಳಲ್ಲಿರುವ ಸೇತುವೆಗಳ ಗುಣಮಟ್ಟಗಳನ್ನು ಕಾಲಕಾಲಕ್ಕೆ ತಪಾಸಣೆ ನಡೆಸಿ ಪರಿಶೀಲನೆ ನಡೆಸಲು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಶ್ಚಿಮ ವಾಹಿನಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 265 ಕೋಟಿ ರೂ. ವೆಚ್ಚದಲ್ಲಿ 11 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗುರುಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಮುಂದಿನ ವರ್ಷ ಮಾರ್ಚ್‍ನಲ್ಲಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿ.ಪಂ. ಉಪಕಾರ್ಯದರ್ಶಿ ಮಹೇಶ್, ಮಹಾನಗರಪಾಲಿಕೆ ಆಯುಕ್ತ ಮಹಮ್ಮದ್ ನಝೀರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಅತಂತ್ರ ದಾಂಪತ್ಯವನ್ನು ಸರಿಪಡಿಸುವ ತಂತ್ರ

error: Content is protected !!
Scroll to Top