(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರದವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.