ಪುತ್ತೂರು ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ➤ ಭಜರಂಗದಳದ ಮುಖಂಡ ರಘು ಸಕಲೇಶಪುರ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಆಗಸ್ಟ್ 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಭಜರಂಗ ದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ರಘು ಸಕಲೇಶಪುರ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಲ್ಲದೆ, ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ.

ಇದಕ್ಕೆ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಕಡಮಜಲು ಸುಭಾಷ್ ರೈ ಮತ್ತು ವಿಶ್ವ ಹಿಂದೂ ಪರಿಷತ್ ಪುತ್ತೂರು ಅಧ್ಯಕ್ಷ ಜನಾರ್ದನ ಬೆಟ್ಟ ಎಂಬವರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಪಿಎಫ್‌ಐ ಪುತ್ತೂರು ನಗರ ಸಮಿತಿಯ ಸದಸ್ಯ ಸಿರಾಜುದ್ದೀನ್ ಎಂಬವರು ಮೂವರ ವಿರುದ್ಧ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 153 (ಎ) ಕಾಯ್ದೆಯಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group