(ನ್ಯೂಸ್ ಕಡಬ) newskadaba.com, ಮುಂಬೈ: ನ.26. ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ದೇವೇಂದ್ರ ಫಡ್ನವೀಸ್ ಅವರು ಬದಲಾದ ರಾಜಕೀಯ ಜಂಜಾಟಗಳಿಂದ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಸುಪ್ರೀಂಕೋರ್ಟ್ ಬುಧವಾರ ಬಹುಮತ ಸಾಬೀತು ಪಡಿಸುವಂತೆ ಆದೇಶ ನೀಡಿದ್ದು, ಆ ನಂತರ ಅಚ್ಚರಿಯ ಬೆಳವಣಿಗೆಯಲ್ಲಿ ಸುದ್ದಿಗೋಷ್ಠಿ ಕರೆದ ಅವರು, ನಮಗೆ ಬಹುಮತದ ಕೊರತೆ ಇರುವುದರಿಂದ ನಾನು ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ಎನ್ ಸಿಪಿ –ಕಾಂಗ್ರೆಸ್ ಹಾಗೂ ಶಿವಸೇನೆ ಮೈತ್ರಿ ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿರುವುದರ ನಡುವೆಯೇ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ರಾತ್ರೋರಾತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಉಳಿದ ಪಕ್ಷಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಹಿನ್ನೆಲೆಯಲ್ಲಿ ಬುಧವಾರ ಸಂಜೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಸರ್ಕಾರಕ್ಕೆ ಸುಪ್ರೀಂ ಆದೇಶ ನೀಡಿತ್ತು. ಸುಪ್ರೀಂ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.