(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9 ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಉದ್ಯಾನವನಗಳಲ್ಲಿ, ರಸ್ತೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಇಂತಹ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ 1579 ಧಾರ್ಮಿಕ ಕಟ್ಟಡಗಳನ್ನು 2009ರಲ್ಲಿ ಗುರುತಿಸಲಾಗಿದ್ದು, ಈ ಪೈಕಿ 345 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. 139 ಕಟ್ಟಡಗಳು ಸಕ್ರಮೀಕರಣಗೊಂಡಿವೆ. 1095 ಧಾರ್ಮಿಕ ಕಟ್ಟಡಗಳು ಬಾಕಿ ಇವೆ ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎಮ್.ಜೆ ರೂಪಾ ಮಾತನಾಡಿ, ಪ್ರತಿಯೊಂದು ಪ್ರಕರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ತಹಶೀಲ್ದಾರ್ ಗೆ ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ವಿವಿಧ ತಾಲೂಕು ತಹಶೀಲ್ದಾರರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.