(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಗುರುವಾರದಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯು ತೀವ್ರಗೊಂಡು ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದ ವೇಳೆ ನಗರದ ಮಸೀದಿಯ ಮೈಕ್ ನಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಲಾಯಿತು.
ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಆದರೂ ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಅರಿತ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗುಂಡೇಟಿಗೆ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಈ ವೇಳೆ ಬಂದರ್ ನ ಮಸೀದಿಯೊಂದರ ಮೈಕ್ ನಲ್ಲಿ ಶಾಂತಿ ಕಾಪಾಡುವಂತೆ ಮುಸ್ಲಿಂ ಮುಖಂಡರು ವಿನಂತಿಸಿದ್ದು, ಆಕ್ರೋಶಭರಿತ ಪ್ರತಿಭಟನಾಕಾರರನ್ನು ಸ್ವಲ್ಪ ಮಟ್ಟಿಗೆ ಸಮಾಧಾನಿಸುವಲ್ಲಿ ಯಶಸ್ವಿಯಾಗಿದೆ.