ಬೆಂಗಳೂರು, ಎ.3: ದಿಲ್ಲಿಯ ನಿಝಾಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೆಲವರಲ್ಲಿ ಕೊರೋನ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಪರೀಕ್ಷೆ ಮಾಡಲು ಹೋದ ವೈದ್ಯಕೀಯ ಸಿಬ್ಬಂದಿ ಮೇಲೆ ಗುಂಪಿನ ದಾಳಿ ನಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯದ ಮುಸ್ಲಿಂ ಮುಖಂಡರು ಹಾಗೂ ಶಾಸಕರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಸಭೆಯಲ್ಲಿ ಕೊರೋನ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದವರ ಸಹಕಾರ ಕುರಿತಂತೆ ಯಡಿಯೂರಪ್ಪ ಮನವಿ ಮಾಡಿ, ಕೊರೋನ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೊಂದೇ ಪರಿಹಾರ. ಲಾಕ್‍ಡೌನ್ ಅವಧಿ ಮುಗಿಯುವವರೆಗೆ ಎಲ್ಲರ ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾತಿ, ಧರ್ಮ ಭೇದ ಮರೆತು ಶ್ರಮಿಸಬೇಕಾಗಿದೆ ಎಂದು ಮನವಿ ಮಾಡಿದರು.
ಸಭೆಯಲ್ಲಿ ಪಕ್ಷಾತೀತವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಮುಸ್ಲಿಂ ಮುಖಂಡರು, ನಿಝಾಮುದ್ದೀನ್ ತಬ್ಲೀಘ್ ಮರ್ಕಝ್ ಗೆ ಭೇಟಿ ನೀಡಿದ ರಾಜ್ಯದ ವ್ಯಕ್ತಿಗಳ ಮಾಹಿತಿ ನೀಡಿ, ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗುವಂತೆ ಹಾಗೂ ಕ್ವಾರಂಟೈನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವೊಲಿಸಲು ಸಹಕಾರ ನೀಡುವುದಾಗಿಯೂ ಹಾಗೂ ಹಲ್ಲೆಯಿಂದ ಭಯಭೀತರಾಗಿರುವ ಆರೋಗ್ಯ ಕಾರ್ಯಕರ್ತರಿಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ತಮ್ಮ ಸಮುದಾಯದ ಜನರ ಮನವೊಲಿಸುವುದಾಗಿ ಭರವಸೆ ನೀಡಿದರು.ಯಡಿಯೂರಪ್ಪ ಮಾತನಾಡಿ, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ನಾವೆಲ್ಲರೂ ಒಟ್ಟಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸೋಣ ಎಂದರು.
ಸಭೆಯಲ್ಲಿ ಮುಖಂಡರಾದ ಸಿ.ಎಂ. ಇಬ್ರಾಹಿಂ, ಎನ್.ಎ. ಹ್ಯಾರಿಸ್, ಝಮೀರ್ ಅಹ್ಮದ್, ನಸೀರ್ ಅಹ್ಮದ್, ರಿಜ್ವಾನ್ ಅರ್ಷದ್, ಅಖಂಡ, ಶ್ರೀನಿವಾಸಮೂರ್ತಿ, ಸಲೀಮ್ ಅಹ್ಮದ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.