(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.13. ದೇಶಾದ್ಯಂತ ಲಾಕ್‌ಡೌನ್ ಜಾರಿಯಾದ ಬಳಿಕ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಿವಾಸಿ ಕನ್ನಡಿಗರನ್ನು ಹೊತ್ತು ವಿದೇಶದಿಂದ ಆಗಮಿಸಿದ ಮೊದಲ ವಿಮಾನವು ಬುಧವಾರ ರಾತ್ರಿ ಲ್ಯಾಂಡ್ ಆಯಿತು.
ದುಬೈನಿಂದ 176 ಪ್ರಯಾಣಿಕರು ಆಗಮಿಸಿದ್ದು, ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು. ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ವಿಮಾನದಲ್ಲಿದ್ದ 176 ಪ್ರಯಾಣಿಕರನ್ನು ದ.ಕ. ಜಿಲ್ಲಾಡಳಿತದಿಂದ ನಗರದ 17 ಹೋಟೆಲ್/ಲಾಡ್ಜ್ ಹಾಗೂ 12 ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಯಿತು. ವಿಮಾನ ನಿಲ್ದಾಣದಲ್ಲೇ ಹೋಟೆಲ್‌ಗಳನ್ನು ಗುರುತಿಸಲು ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಪ್ರಯಾಣಿಕರನ್ನು ತಾವು ಗುರುತಿಸಿರುವ ಹೋಟೆಲ್‌ಗಳಿಗೆ ವಾಹನಗಳ ಮೂಲಕ ತಲುಪಿಸಲಾಯಿತು.
ವಿಮಾನ ಆಗಮನದ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.