ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ

ಉಡುಪಿ, ಮೇ 16: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14ರಂದು ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ಬಂದ ಮೃತ ವ್ಯಕ್ತಿಯ ಪರೀಕ್ಷಾ ವರದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಮೃತ 54 ವರ್ಷದ ವ್ಯಕ್ತಿ ಕುಂದಾಪುರ ತಾಲೂಕಿನವರಾಗಿದ್ದು, ಈಚೆಗೆ ಮಹಾರಾಷ್ಟ್ರದಿಂದ ಬಂದಿದ್ದರು. ಮೇ 13ರಂದು ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೇ 14ರಂದು ಸಂಜೆ ಅವರು ಮೃತಪಟ್ಟಿದ್ದರು ಎಂದು ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದರು.

Also Read  ಸುಳ್ಯ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಕೂಡಲೇ ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಶನಿವಾರ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ಖಚಿತವಾಗಿದೆ ಎಂದು ತಿಳಿಸಿದರು.

error: Content is protected !!
Scroll to Top