ಮಂಗಳೂರು, ಮೇ 18: ದ.ಕ. ಜಿಲ್ಲೆಯ ವಿವಿಧೆಡೆ ಸೋಮವಾರ ಮುಂಜಾನೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ.
ಮುಂಜಾನೆ ಸುಮಾರು 5 ಗಂಟೆಗೆ ಆರಂಭಗೊಂಡ ಮಳೆಯು ಬೆಳಗ್ಗೆ 9ರವರೆಗೂ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡ ಅಂಫಾನ್ ಚಂಡಮಾರುತದ ಪ್ರಭಾವದಿಂದ ಮೋಡ ಕವಿದ ವಾತಾವರಣದ ಮಧ್ಯೆ ಮಳೆ ಸುರಿದಿದೆ.
ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕಡಬ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಬಿರುಗಾಳಿಯೂ ಬೀಸಿದ ಪರಿಣಾಮ ಅಲ್ಲಲ್ಲಿ ಮರಗಳು ಉರುಳಿದ್ದು, ವಿದ್ಯುತ್ ಕೂಡ ಕೈ ಕೊಟ್ಟಿದೆ.