ಬೆಂಗಳೂರು, ಮೇ 30: ಕೊರೋನ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊರೋನ ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ನಿಯಮ ಉಲ್ಲಂಘಿಸಿದಲ್ಲಿ, ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಅಧಿಕಾರಿಯ ಆದೇಶ ಉಲ್ಲಂಘನೆ), 268, 269, 279 (ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಎಚ್ಚರಿಕೆ ನೀಡಿದೆ.