(ನ್ಯೂಸ್ ಕಡಬ)newskadaba.com ನವದೆಹಲಿ. ಜೂ. 13, ದೇಶದಲ್ಲಿ ಕೊರೋನಾ ಮಹಾಮಾರಿ ನಿಯಂತ್ರಣ ಕಳೆದುಕೊಂಡಿದ್ದು, ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಭಾರತ ವಿಶ್ವದಲ್ಲೇ ನಾಲ್ಕನೇ ಸ್ಥಾನದಲ್ಲಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಲಾಕ್ ಡೌನ್ ಸಡಿಲಿಕೆಯೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದ್ದು ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲು ಮುಂದಾಗಿದ್ದಾರೆ. ಮತ್ತೆ ದೇಶ ಅಥವಾ ಡೇಂಜರ್ ಝೋನ್ ನಲ್ಲಿರುವ ರಾಜ್ಯಗಳು ಲಾಕ್ ಡೌನ್ ಆಗುತ್ತವೆ ಎಂದು ಹೇಳಲಾಗುತ್ತಿದೆ.
ದೇಶದಲ್ಲಿ ಅನ್ ಲಾಕ್ ಮಾಡುವ ಸಂದರ್ಭದಲ್ಲಿ ಸಭೆ ಸೇರಿದ್ದ ಪ್ರಧಾನಿಯವರು ಈಗ ಮತ್ತೆ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಎರಡು ಬ್ಯಾಚ್ ಗಳಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಜೂನ್ 16ರಂದು ಸಂಜೆ 3 ಗಂಟೆಗೆ 21 ಮುಖ್ಯಮಂತ್ರಿಗಳು ಹಾಗೂ ಲೆಫ್ಟಿನೆಂಟ್ ಗವರ್ನರ್ ಜೊತೆಗೆ ಸಭೆ ನಡೆದರೆ, ಜೂನ್ 17ರಂದು ಸಂಜೆ 3 ಗಂಟೆಗೆ 15 ಮುಖ್ಯಮಂತ್ರಿಗಳು ಹಾಗೂ ಲೆಫ್ಟಿನೆಂಟ್ ಗವರ್ನರ್ ಜೊತೆಗೆ ಸಭೆ ನಡೆಸಲಿದ್ದಾರೆ.
ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಕೊರೋನಾ ಹೆಚ್ಚುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಅಭಿಪ್ರಾಯವನ್ನು ಪಡೆಯುವ ಸಾಧ್ಯತೆಯಿದೆ. ಇನ್ನೊಂದೆಡೆ ದೇಶದಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆಯಾದರೂ ಅಚ್ಚರಿ ಪಡಬೇಕಾಗಿಲ್ಲ.