(ನ್ಯೂಸ್ ಕಡಬ)newskadaba.com ಪುತ್ತೂರು, ಜೂ.22, ದಿನೇ ದಿನೇ ಕೊರೋನಾ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಇದರಂತೆ ಪುತ್ತೂರಿನ 5 ಖಾಸಗಿ ಆಸ್ಪತ್ರೆಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 30 ಆಸ್ಪತ್ರೆಗಳನ್ನು ಚಿಕಿತ್ಸೆಗಾಗಿ ಗುರುತಿಸಲಾಗಿದೆ. ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಸುಮಾರು 8 ಸಾವಿರಕ್ಕಿಂತಲೂ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿರುವುದರಿಂದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಅವಕಾಶ ಕಲ್ಪಿಸಿದ್ದು, ಇದೀಗ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಆದರ್ಶ ಆಸ್ಪತ್ರೆ, ಚೇತನಾ ಆಸ್ಪತ್ರೆ, ಮಹಾವೀರ ಮೆಡಿಕಲ್ ಸೆಂಟರ್ ಹಾಗೂ ಧನ್ವಂತರಿ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿ ಸುಮಾರು 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾಗೆ ಚಿಕಿತ್ಸೆ ನೀಡಲು ಅನುಮತಿ ನೀಡಿದೆ.