ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 23, ಜೂನ್ 25 ರಿಂದ ಜುಲೈ 4 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರ ಅನ್ವಯ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧೂ ರೂಪೇಶ್ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಈ ಅವಧಿಯ ವೇಳೆ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು /ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

Also Read  102 ನೆಕ್ಕಿಲಾಡಿಯ ಕೆರ್ಮಾಯಿಯಲ್ಲಿ ಸಾರ್ವಜನಿಕ ಕೊಳವೆ ಬಾವಿಗೆ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಚಾಲನೆ

ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಅಥವಾ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top