(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಕೂಡಿ ಬಂದಿದ್ದು, ಕರಾವಳಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಂದಿನಿಂದ ಜುಲೈ 3ವರೆಗೆ ಪರೀಕ್ಷೆ ನಡೆಯಲಿದ್ದು, ದ.ಕ.ಜಿಲ್ಲೆಯಲ್ಲಿ ಈ ಬಾರಿ 30,835 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರ 21, ದಕ್ಷಿಣ 21, ಮೂಡುಬಿದಿರೆ 5, ಪುತ್ತೂರು 12 ಮತ್ತು ಸುಳ್ಯದಲ್ಲಿ 6 ಸೇರಿ ಒಟ್ಟು 95 ಪರೀಕ್ಷಾ ಕೇಂದ್ರಗಳಿವೆ. ಜ್ವರ, ಶೀತ ಮೊದಲಾದ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗಾಗಿ ಪ್ರತಿ ಕೇಂದ್ರದಲ್ಲಿ ಎರಡರಂತೆ ಹೆಚ್ಚುವರಿ ಕೊಠಡಿಗಳನ್ನು ಸಿದ್ಧಪಡಿಸಿಡಲಾಗಿದೆ.
ಪ್ರತಿ ತರಗತಿ ಕೋಣೆಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ. ಆಯಾ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಗ್ರಾಪಂ, ನಗರಸಭೆ, ಪುರಸಭೆ, ಮಹಾನರ ಪಾಲಿಕೆಯಂತಹ ಸ್ಥಳೀಯಾಡಳಿತ ಸಂಸ್ಥೆಗಳ ವತಿಯಿಂದ ಪರೀಕ್ಷೆ ನಡೆಯುವ ಕೊಠಡಿ, ಶಾಲಾ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ.ಉಡುಪಿ ಜಿಲ್ಲೆಯಲ್ಲಿ ಜೂ.25ರಿಂದ ಜುಲೈ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ. ಈ ಪರೀಕ್ಷೆಗಳನ್ನು ಸುಸೂತ್ರ, ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ವಲಯವೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಘೋಷಿಸಿದ್ದಾರೆ.