(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.29: ಕೋವಿಡ್ 19 ನಿಯಂತ್ರಣಕ್ಕಾಗಿ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಇದೀಗ ಅಧಿಕೃತ ಆದೇಶವನ್ನು ಸಹ ಹೊರಡಿಸಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರ ಪೂರ್ಣ ದಿನದ ಲಾಕ್‌ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜುಲೈ 5 ರಿಂದ ಆಗಸ್ಟ್ 2ರ ವರೆಗಿನ ಎಲ್ಲಾ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಆದ್ರೆ ಅಗತ್ಯ ಸರಕು ಸಾಗಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಅದೇ ರೀತಿ ಅಗತ್ಯ ಸೇವೆಗಳನ್ನು ನೀಡುವ ಇಲಾಖೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಸರ್ಕಾರಿ ಇಲಾಖೆಗಳು, ಕಚೇರಿಗಳು, ನಿಗಮ ಮಂಡಳಿಗಳು ಜುಲೈ 10 ರಿಂದ ಆಗಸ್ಟ್ 8ರ ವರೆಗೆ ಎಲ್ಲಾ ಶನಿವಾರ ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿರುವ ಸರ್ಕಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಿದೆ.ಈ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆ ಹೊರತುಪಡಿಸಿ ಜನರ ಚಲನವಲನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ. ಕೋವಿಡ್ 19 ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲು ಎರಡು ಹೊಸ ಕಾರ್ಯತಂಡವನ್ನು ರಚಿಸಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.