(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಗುರುವಾರ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರುಗಳು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮವು ಐತಿಹಾಸಿಕ ದಾಖಲೆ ಬರೆಯಿತು.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಮಾರಂಭ ನಡೆಯುವ ಸ್ಥಳವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮದ ಬದಲಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು. ರಾಜ್ಯಾದ್ಯಂತ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಏಕಕಾಲಕ್ಕೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ವಿನೂತನ ಹಾಗೂ ವಿಶಿಷ್ಟ ಪ್ರಯೋಗಗಳ ಮೂಲಕ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ದಾಖಲೆ ಬರೆದರು. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.