(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14: ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದು, ರೋಗಿಗಳು ತಮ್ಮ ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ. ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಸಾಮರ್ಥ್ಯ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಬಿಪಿಎಲ್, ಎಪಿಎಲ್ ಕಾರ್ಡ್‌ದಾರರು, ರೇಶನ್ ಕಾರ್ಡ್ ಇಲ್ಲದವರು , ವಲಸೆ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಕೂಡ ಜಿಲ್ಲೆಯ ವೈದ್ಯಕೀಯ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ.
ಇದರೊಂದಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ಮುಂದುವರಿಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದರು. ಇದರಿಂದ ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.