(ನ್ಯೂಸ್ ಕಡಬ) newskadaba.com ಮಂಗಳೂರು , ಜು.28: ರಾಜ್ಯದ ನೂತನ ಮೀನುಗಾರಿಕಾ ನೀತಿಯ ಕರಡು ಸಿದ್ಧವಾಗಿದ್ದು, ಶೀಘ್ರದಲ್ಲೇ ನೀತಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಮೀನುಗಾರಿಕಾ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಸೋಮವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಜೊತೆಗಿನ ವಿಡಿಯೊ ಸಂವಾದ ಕಾರ್ಯಕ್ರಮದ ವೀಕ್ಷಣೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಚಾಲನೆ ನೀಡಿದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
‘ಹೊಸ ಮೀನುಗಾರಿಕಾ ನೀತಿಯ ಕರಡು ಪ್ರತಿಯಲ್ಲಿರುವ ಅಂಶಗಳಿಗೆ ಸಂಬಂಧಿಸಿದಂತೆ ವಿವಿಧ ವಲಯಗಳಿಂದ ಈಗಾಗಲೇ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವುಗಳ ಆಧಾರದಲ್ಲಿ ನೀತಿಯನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ. ಮೀನುಗಾರಿಕೆಗೆ ಉತ್ತೇಜನ ನೀಡುವುದಕ್ಕೆ ಪೂರಕವಾಗಿ ನೀತಿ ಜಾರಿಯಾಗಲಿದೆ’ ಎಂದರು. ಇದೇ 30ರಂದು ವಿಧಾನಸೌಧದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆಯನ್ನು ಆಯೋಜಿಸಲಾಗುವುದು. ಮೀನುಗಾರಿಕಾ ಇಲಾಖೆಯ ಸಾಧನೆಗಳಿಗೆ ಸಂಬಂಧಿಸಿದ ಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ ‘ಆತ್ಮ ನಿರ್ಭರ್ ಭಾರತ’ ಯೋಜನೆಯಲ್ಲಿ ರಾಜ್ಯಕ್ಕೆ ಹಾಗೂ ಮೀನುಗಾರಿಕಾ ಕ್ಷೇತ್ರಕ್ಕೆ ದೊರೆಯಬಹುದಾದ ಅನುದಾನದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಮೀನುಗಾರಿಕಾ ಇಲಾಖೆಯ ಮುಂದಿನ ಕಾರ್ಯಯೋಜನೆಗಳ ಕುರಿತೂ ವಿಚಾರ ವಿನಿಮಯ ನಡೆಯಲಿದೆ ಎಂದು ಸಚಿವರು ತಿಳಿಸಿದರು.