ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:   ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಬಂದೆರಗಿರುವುದರಿಂದ ಈ ಸಂದರ್ಭದಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ ಎಂದು ಹೇಳಿದರು.ಈ ಎಲ್ಲ ಸಾಮೂಹಿಕ ಪ್ರಯತ್ನಗಳು ಗಟ್ಟಿರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

Also Read  ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

error: Content is protected !!
Scroll to Top