(ನ್ಯೂಸ್ ಕಡಬ) newskadaba.com ಮಂಗಳೂರು,ಆ.03: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಗೊಂಡ ಹಿನ್ನಲೆಯಲ್ಲಿ ಮಳೆಯ ಪ್ರಮಾಣದಲ್ಲಿ ಭಾರಿ ಕುಸಿತವೂ ಕಂಡಿತ್ತು.
ಈ ನಡುವೆ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮಳೆಯ ಜೊತೆಗೆ ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದ್ದು, ಸಮುದ್ರದಲ್ಲೂ ಇದರ ಪರಿಣಾಮ ಕಂಡು ಬರಲಿದೆ. ಗರಿಷ್ಠ 3.3 ಮೀಟರ್ ಗಳಷ್ಟು ಎತ್ತರದಲ್ಲಿ ಸಮುದ್ರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.