ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.7: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು ಯಾವುದೇ ಖಾಸಗಿ ಆಸ್ಪತ್ರೆ ಚಿಕಿತ್ಸೆಗಾಗಿ ಹೆಚ್ಚುವರಿ ಬಿಲ್ ತೆಗೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಕೊಟ್ಟಿದ್ದಾರೆ.

ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸಭೆ ನಡೆಸಿ ಮಾತಾನಾಡಿದ ಸಚಿವರು. ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಕೊರೊನಾ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮರ್ಥ್ಯದ ಶೇ.50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಖಾಸಗಿ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೊರೊನಾ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ.  ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ಗಳನ್ನು ಸರಬರಾಜು ಮಾಡಲಿದೆ ಎಂದರು.

Also Read  ಸಂಪ್ರದಾಯಬದ್ಧವಾಗಿ ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ನಡೆಯಲಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋರ್ಡ್ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

Also Read  ಬಂಟ್ವಾಳ: ಆಕಸ್ಮಿಕವಾಗಿ ತೆಂಗಿನಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ, ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ. ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top