(ನ್ಯೂಸ್ ಕಡಬ) newskadaba.com ದೆಹಲಿ, ಆ.11: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
84 ವರ್ಷದ ಪ್ರಣಬ್ ಸೋಮವಾರ ಬೆಳಗ್ಗೆ ತಾವೇ ಟ್ವೀಟ್ ಮಾಡಿ ಕೊರೋನಾ ಸೋಂಕು ದೃಢಪಟ್ಟ ವಿಷಯವನ್ನು ಪ್ರಕಟಿಸಿದ್ದರು. ”ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಪರೀಕ್ಷೆ ನಡೆಸಿದಾಗ ಕೊರೋನಾ ಇರುವುದು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗೆ ದಾಖಲಾಗಿದ್ದೇನೆ. ಕಳೆದ ಒಂದು ವಾರದಲ್ಲಿ ನನ್ನನ್ನು ಭೇಟಿಯಾದವರು ಐಸೋಲೇಷನ್‌ಗೆ ತೆರಳುವ ಜತೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ,”ಎಂದು ಟ್ವೀಟ್ ಮಾಡಿದ್ದರು.