(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.
ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿದೆ. ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ 2014ರಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದ ಅಬ್ದುಲ್, 2017ರಲ್ಲಿ ಸರ್ಕಾರಿ ಕೋಟಾದಡಿ ಎಂ.ಎಸ್. ವ್ಯಾಸಂಗಕ್ಕಾಗಿ ಅದೇ ಕಾಲೇಜಿಗೆ ಸೇರಿದ್ದ. ಇದೇ ಜುಲೈನಲ್ಲಿ ಅಂತಿಮ ಪರೀಕ್ಷೆಯನ್ನೂ ಬರೆದಿದ್ದ. ಕಾಲೇಜಿನ ಹೊರಗೆ ಚಟುವಟಿಕೆಗಳ ಬಗ್ಗೆ ನಮಗೆ ಗೊತ್ತಿರಲಿಲ್ಲ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆ ತಿಳಿಸಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಎನ್‌ಐಎ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.