(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾಘಂಟಿ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಚಿವರ ವಿರುದ್ಧ ಭ್ರಷ್ಟ್ರಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ.
ಈ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆಯ ಅಧ್ಯಕ್ಷ ಎಚ್.ಬಿ. ನಾಗೇಶ್ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್ ಮತ್ತು ಬಸವರಾಜ ರಾಯರೆಡ್ಡಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ. ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ವಿಶ್ವವಿದ್ಯಾಲಯದ ಸಿಬ್ಬಂದಿ ನೇಮಕ ಸೇರಿದಂತೆ ಯಾವುದಾದರು ಕೆಲಸಗಳು ಆಗಬೇಕಾದರೆ ಸರ್ಕಾರಕ್ಕೆ ಲಂಚ ನೀಡಬೇಕು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಸೂಟ್‌ಕೇಸ್ ವಿಷಯ ಪ್ರಸ್ತಾಪಿಸಿದ್ದಾರೆ. ಇದು ಕೆಲಸಗಳಾಗಬೇಕಾದರೆ ಲಂಚ ಪಡೆದಿದ್ದಾರೆ ಎಂಬುದಕ್ಕೆ ನಿರ್ದಶನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಬ್ಬರು ಸಚಿವರ ಜತೆಗೆ ಮಲ್ಲಿಕಾ ಘಂಟಿ ವಿರುದ್ಧವೂ ತನಿಖೆಯಾಗಬೇಕು. ಯಾರಿಗೆ ಲಂಚ ನೀಡಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ತನಿಖೆ ಅಗತ್ಯ ಇದೆ ಎಂದು ಹೇಳಿದ್ದಾರೆ.