(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 05. ಈ ಸಾಲಿನ ಬಸ್ಸು ಪಾಸ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಗೊಂದಲದ ಗೂಡಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸೇವಾ ಸಿಂಧುವಿನಲ್ಲಿ ನೋಂದಾಯಿಸಿ, ನಂತರ ಅದನ್ನು ಶಾಲಾ – ಕಾಲೇಜಿನ ಸಹಿ ಪಡೆದು ಮತ್ತೆ ಬಸ್ಸು ಡಿಪೋಗೆ ತಲುಪಿಸಿ ನಂತರ ಬಸ್ಸು ಪಾಸ್ ಪಡೆಯುವಂತೆ ಪ್ರಕ್ರಿಯೆ ಇದೀಗ ನಡೆಯುತ್ತಿದೆ, ಸೇವಾ ಸಿಂದು ಯಾವಾಗ ನೋಡಿದರೂ ಸರ್ವರ್ ಸಮಸ್ಯೆ ಉಂಟಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಬಸ್ ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳೀಕೃತಗೊಳಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾದ್ಯಂತ ಮಂಗಳೂರು ವಿಶ್ವವಿದ್ಯಾನಿಲಯ ಸೇರಿದಂತೆ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ವಿಟ್ಲದ ಹಲವಾರು ಕಾಲೇಜುಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕರಂತೆ, ರೈತರಂತೆ ವಿದ್ಯಾರ್ಥಿಗಳನ್ನು ಬೀದಿಗಿಳಿಸದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ನಾಯಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.