(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ.
ಆರ್.ಆರ್ ನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು, 16 ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ಪೈಕಿ ಅಮಿತ್ ದೇಗ್ವೇಕರ್, ಭರತ್ ಕುರ್ನೆ, ಸುಧನ್ವಾ ಗೊಂಧಲೇಕರ್, ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ್ ಯಡವೆ ಹಾಗೂ ರಾಜೇಶ್ ಬಂಗೇರ್ ಎಂಬವರು ಜಾಮೀನು ಕೋರಿ ತಮ್ಮ ವಕೀಲರ ಮೂಲಕ 2020 ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರು ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಶನಿವಾರ ಆದೇಶ ಹೊರಡಿಸಿದೆ.