(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಕೋವಿಡ್-19 ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ನೈಟ್ ಕರ್ಫ್ಯೂ ಹೇರಲಾಗುತ್ತದೆ ಎಂಬ ಆತಂಕ ಎದುರಾಗಿತ್ತಾದರೂ, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ.
ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಕೊರೋನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣ ಸಂಬಂಧ ಚರ್ಚೆ ನಡೆಸಲಾಯಿತು. ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಲು ಜನ ಜಾಗೃತಿ ಹಾಗೂ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆ ಸಮಾರಂಭ, ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ನಡೆಸಬೇಕು. ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಮಿತಿ ಹೇರಬೇಕು. ವ್ಯಕ್ತಿಗತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.