(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 25. ಕೇಂದ್ರ ಸರಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ನಾಳೆ ಭಾರತ್ ಬಂದ್‍ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ವಿವಿಧೆಡೆ ಪ್ರತಿಭಟನೆ ಹಾಗೂ ಕೃಷಿ ಕಾಯ್ದೆಗಳ ಶವಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಐಕ್ಯ ಹೋರಾಟ ಸಮಿತಿ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕೇಂದ್ರದ ಕೃಷಿ ವಿನಾಶ ಕಾಯ್ದೆ, ರೈತರ ಮರಣ ಶಾಸನ ವಿರೋಧಿಸಿ ರಾಜ್ಯದ ಎಲ್ಲಾ ನಗರಗಳ ಜಿಲ್ಲಾ ಕೇಂದ್ರಗಳಲ್ಲಿ ಕೃಷಿ ಕಾಯ್ದೆಗಳ ಶವಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯು ಮಾ.26 ರಂದು ಬೆಂಗಳೂರಿನ ಟೌನ್ ಹಾಲ್ ನಿಂದ ಮೈಸೂರ್ ಬ್ಯಾಂಕ್ ವೃತ್ತದವರೆಗೆ ನಡೆಯಲಿದ್ದು, ನಾಯಂಡಹಳ್ಳಿ ಸುತ್ತಮುತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರೈತರು ಕಳೆದ ನಾಲ್ಕು ತಿಂಗಳಿನಿಂದ ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದು, ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ರೈತರು ನಡೆಸುತ್ತಿರುವ ಪ್ರತಿಭಟನೆ ನಾಲ್ಕು ತಿಂಗಳು ಪೂರೈಸಲಿದ್ದು, ಇದರ ಅಂಗವಾಗಿ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‍ಗೆ ಕರೆ ನೀಡಿದೆ.
ಈ ಕೃಷಿ ಮಸೂದೆಗಳನ್ನು ವಿರೋಧಿಸಿ ಮಾ. 26ರಂದು ಬಂಟ್ವಾಳದ ಬಿಸಿ ರೋಡ್‍ನಲ್ಲಿ ಬೃಹತ್ ಪ್ರತಿಭಟನಾಸಭೆ ಹಮ್ಮಿಕೊಳ್ಳಲಾಗಿದ್ದು, ದಕ್ಷಿಣ ಕನ್ನಡದ ರೈತ, ದಲಿತ, ಕಾರ್ಮಿಕ ಹಾಗೂ ಜನಪರ ಚಳವಳಿಯ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ದೆಹಲಿಯ ಹೋರಾಟಕ್ಕೆ ಬೆಂಬಲ ನೀಡಲಾಗುವುದು ಎಂದು ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಪೂಣಚ್ಚ ತಿಳಿಸಿದ್ದಾರೆ.