(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.12. ರಾಜ್ಯದಲ್ಲಿ ಕೊರೋನಾ ರೌದ್ರನರ್ತನ ಮಿತಿಮೀರಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಅವರು ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ.
ಭಾನುವಾರದಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ತಕ್ಷಣವೇ ಎಚ್ಚೆತ್ತುಕೊಂಡು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್‍ಡೌನ್ ಜಾರಿ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು. ಮಹಾರಾಷ್ಟ್ರದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲನೆ ಮಾಡದ ಕಾರಣ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಹೀಗೆಯೇ ಮುಂದುವರಿದರೆ ಇಲ್ಲಿಯೂ ಲಾಕ್‍ಡೌನ್ ಅನಿವಾರ್ಯವಾಗಲಿದೆ. ಸಾರ್ವಜನಿಕರ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ಸಾರ್ವಜನಿಕರ ಕರ್ತವ್ಯವಾಗಿದೆ ಎಂದವರು ಎಚ್ಚರಿಸಿದರು.