(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ. 25. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ. 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ.
ಕಳೆದ ವಾರವಷ್ಟೇ ತೌಕ್ತೆ ಚಂಡಮಾರುತದ ಅಬ್ಬರದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿದಿತ್ತು. ಇದೀಗ ಮೇ 26ರಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು- ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೆ ಈ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಜೂನ್ ಮೊದಲ ವಾರ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದ್ದು, ಅದಕ್ಕೂ ಮೊದಲು ಮೇ ತಿಂಗಳ ಕೊನೆ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನೈಋತ್ಯ ಮುಂಗಾರು ಜೂನ್ 1 ರಂದು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆಯಿದ್ದು, ಜೂನ್ 5ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ.