(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಿಗ್ಗೆ 07 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಮಧ್ಯಾಹ್ನ 01 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಉಳಿದ ದಿನಗಳಲ್ಲಿ ಮೇಲಿನ ಆದೇಶ ಅನ್ವಯವಾಗಲಿದೆ. ಅಂಗಡಿ ಮುಂಗಟ್ಟು ಮತ್ತಿತರ ವಾಣಿಜ್ಯ ಚಟುವಟಿಕೆಯ ಉದ್ದೇಶಗಳಿಗೆ/ಕೇಂದ್ರಗಳಿಗೆ 18 ವರ್ಷದೊಳಗಿನವರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹೊಟೇಲ್‌ಗಳನ್ನು ಕೂಡ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೊಟೇಲ್ ಮತ್ತು ಬಸ್ ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟನ್ನು ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.