(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.23: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿ ಸಾಧಿಸುವಂತೆ ನಿರ್ದೇಶನ ನೀಡಿದರು.ರಾಜ್ಯದಲ್ಲಿ ಈ ವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2021-22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು