(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.14. ರಾಜ್ಯ ಸರಕಾರದ ಸೂಚನೆಯ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಈ ನಡುವೆ ಶಾಲಾ ಕಾಲೇಜುಗಳು ಶುಲ್ಕ ಪಾವತಿಸುವಂತೆ ಒತ್ತಡ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.
ದ.ಕ. ಜಿಲ್ಲೆಯ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಉತ್ತಮವಾಗಿ ಇರುವುದರಿಂದ ಶಾಲೆಗಳಲ್ಲಿ 9ನೇ ಮತ್ತು 10ನೇ ತರಗತಿಯನ್ನು ಬೆಳಗ್ಗಿನ ಹೊತ್ತು ಹಾಗೂ 8ನೇ ತರಗತಿಯನ್ನು ಮಧ್ಯಾಹ್ನದ ಬಳಿಕ ನಡೆಸಲು ತೀರ್ಮಾನಿಸಲಾಗಿದೆ. ಭೌತಿಕ ತರಗತಿಗೆ ಮಕ್ಕಳನ್ನು ಕಳುಹಿಸಲು ಪೋಷಕರು ಹಿಂಜರಿದಲ್ಲಿ ಅಂತಹ ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಸಲು ಸೂಚಿಸಲಾಗಿದೆ. ಅನುದಾನಿತ, ಖಾಸಗಿ ಸೇರಿದಂತೆ ಶಾಲಾ ಕಾಲೇಜುಗಳಲ್ಲಿ ಶುಲ್ಕ ಪಾವತಿಗೆ ಒತ್ತಡ ಹಾಕದಿರುವಂತೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದವರು ಹೇಳಿದರು.