(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 13. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 60ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಲಾ ಎರಡು ಸಾವಿರ ರೂಪಾಯಿ ಹಾಗೂ ಶೇ. 75 ಅಂಕಗಳಿಗಿಂತ ಹೆಚ್ಚು ಗಳಿಸಿದವರಿಗೆ ತಲಾ 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಡನೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹ ಧನದ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ತಿಳಿಸಿದರು. ಶೇಕಡಾ 60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ 2000 ರೂ. ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹ ಧನ ನೀಡಲಿದ್ದು, ಇದಕ್ಕಾಗಿ 51 ಕೋಟಿ ರೂಪಾಯಿ ವೆಚ್ಚ ಭರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.