ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಪಬ್ಲಿಕ್ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಮಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

 


ನ. 22ರಂದು ಮಂಗಳೂರಿನಲ್ಲಿ ಪಬ್ಲಿಕ್ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತೀಚೆಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳ ವರದಿಗಾರರ ಮೇಲೆ ಹಲ್ಲೆಯಂತಹ ಘಟನೆಗಳು ನಡೆಯುತ್ತಿದ್ದು, ಪತ್ರಕರ್ತರಿಗೆ ಸಮಾಜದಲ್ಲಿ ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಕಷ್ಟಕರ ಸನ್ನಿವೇಶ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಅವಕಾಶ ವಾಗಬೇಕು. ಪತ್ರಕರ್ತರ ಮೇಲೆ ನಡೆಯುತ್ತಿರುವಂತಹ ಹಲ್ಲೆಗಳ ವಿಚಾರವಾಗಿ ಸರಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

Also Read  ಮಂಗಳೂರು: ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಯೂಸುಫ್ ರೆಂಜಲಾಡಿ, ಪ್ರಧಾನ ಕಾರ್ಯದರ್ಶಿ ಲಕ್ಷೀಕಾಂತ್ ರೈ ಅನಿಕೋಟೆಲ್, ಕೋಶಾಧಿಕಾರಿ ನರೇಶ್ ಜೈನ್, ಸದಸ್ಯರಾದ ಶ್ರೀಧರ್ ರೈ ಕೊಡಂಬು, ಫಾರೂಕ್ ಶೇಕ್ ಮುಕ್ವೆ ಮೊದಲಾದವರು ಮನವಿ ನೀಡುವ ನಿಯೋಗದಲ್ಲಿದ್ದರು.

error: Content is protected !!
Scroll to Top