(ನ್ಯೂಸ್ ಕಡಬ) newskadaba.com ಕಾರವಾರ, ನ.04. ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ನಡೆಸಿದ ಪರಿಣಾಮ ಸೂಕ್ತ ಚಿಕಿತ್ಸೆ ದೊರೆಯದೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ನಿವಾಸಿ ರಾಜೇಶ್ವರಿ(21) ಎಂದು ಗುರುತಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಮಂಚಿಕೇರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರು ಮತ್ತು ಸಿಬ್ಬಂದಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿನಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಆಸ್ಪತ್ರೆಯ ಬಾಗಿಲಲ್ಲೇ ಜೀವ ಬಿಟ್ಟಿದ್ದಾಳೆ.
ಘಟನೆ ನಡೆದ ಬಳಿಕ ಸ್ಥಳಕ್ಕಾಗಮಿಸಿದ ಸಿಬ್ಬಂದಿಯನ್ನು ರಾಜೇಶ್ವರಿ ಸಂಬಂಧಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ಷಯ ರೋಗಿಗಳಿಗೆ ಮನೆಗೆ ಹೋಗಿ ಚಿಕಿತ್ಸೆ ನೀಡಬೇಕೆಂಬ ನಿಯಮವಿದೆ. ಆದರೆ ಇಲ್ಲಿ ಆಸ್ಪತ್ರೆಗೆ ಹೋದರೂ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.