ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಸಾಲವನ್ನು ಮನ್ನಾ ಮಾಡಬೇಕು,‌ ಮಧ್ಯಪ್ರದೇಶದ ಮಂದಸೌರ್ ನಲ್ಲಿ ನಡೆದ ಗೋಲಿಬಾರ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ನಾಳೆ (ಜೂ.12 ನೇ ಸೋಮವಾರ) ರಾಜ್ಯ ಬಂದ್ ಗೆ ಕರೆ ನೀಡಿದೆ.
ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರೈತರು ಮಧ್ಯಪ್ರದೇಶದ ಮಂದಸೌರ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಪೊಲೀಸರು ಗೋಲಿಬಾರ್ ಮಾಡಿಸುವ ಮೂಲಕ ಹಲವು ರೈತರ ಸಾವಿಗೆ ಕಾರಣವಾಗಿದ್ದು, ಇದನ್ನು ಖಂಡಿಸಿ ಬಂದ್ ಕರೆನೀಡಲಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಶನಿವಾರದಂದು ಸುದ್ದಿ ಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೊಂದೆಡೆ ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ, ಮೇಕೆದಾಟು ಯೋಜನೆ ಜಾರಿ, ಮಹಾದಾಯಿ ವಿವಾದ ಪರಿಹಾರಕ್ಕಾಗಿ ಆಗ್ರಹಿಸಿ ಜೂ.12 ರಂದು ಕನ್ನಡ ಚಳವಳಿ ಒಕ್ಕೂಟವು ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಒಕ್ಕೂಟದ ಅಧ್ಯಕ್ಷ ವಾಟಾಳ್‌ನಾಗರಾಜ್, ಸದಸ್ಯರಾದ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ, ಮಂಜುನಾಥ್ ದೇವ್ ಸೇರಿದಂತೆ ನಾನಾ ಕನ್ನಡ ಪರ ಸಂಘಟನೆಗಳು ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ ಎಂದು ಹೇಳಿದರು.

Also Read  ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ದುರ್ಮರಣ

ವಾಟಾಳ್ ನಾಗರಾಜ್ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜನರ ಕುಡಿಯುವ ನೀರಿನ ಸಮಸ್ಯ ಬಗೆಹರಿಸಲು ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಎರಡು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗೋವಾ, ಮಹಾರಾಷ್ಟ್ರ, ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಪ್ರಧಾನಿ ಅವರೇ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ಬಿಜೆಪಿ ಸಂಸದರಾಗಲಿ ಪ್ರಧಾನಿಯನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿಲ್ಲ ಎಂದು ಕಿಡಿಕಾರಿದರು.

ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳ ಜನ ಶಾಶ್ವತ ನೀರಿಗೆ ಆಗ್ರಹಿಸಿ ಒಂದು ವರ್ಷದಿಂದ ಸತ್ಯಾಗ್ರಹ ನಡೆಸುತ್ತಿದ್ದರೂ ಸರಕಾರ ಮೂಕ ಪ್ರೇಕ್ಷಕನಂತೆ ಆಡುತ್ತಿದೆ. ಈ ಎಲ್ಲಾ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಸುಮಾರು 2 ಸಾವಿರ ಸಂಘಟನೆಗಳು ಬೆಂಬಲ ನೀಡಲಿವೆ ಎಂದರು.

ಬಂದ್‌ಗೆ ಬೆಂಬಲವಿಲ್ಲ: ಜೂ.12 ರಂದು ರಾಜ್ಯಾದ್ಯಂತ ಕರೆ ನೀಡಿರುವ ಬಂದ್‌ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ಹೊಟೇಲ್ ಮಾಲಕರ ಸಂಘ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುತ್ತಿಲ್ಲ ಎಂದು ಪ್ರಕಟಿಸಿವೆ. ಇದಲ್ಲದೆ ಪೆಟ್ರೋಲ್ ಬಂಕ್‌ಗಳು ಎಂದಿನಂತೆ ತೆರೆದಿರುತ್ತವೆ. ಆಟೋಗಳು ರಸ್ತೆಗಿಳಿದು ಓಡಾಡಲಿವೆ. ಕರ್ನಾಟಕ ರಕ್ಷಣಾ ವೇದಿಕೆ(ಸ್ವಾಭಿಮಾನ), ಕರ್ನಾಟಕ ಕಾರ್ಮಿಕರ ವೇದಿಕೆ, ಕರ್ನಾಟಕ ಕ್ರಾಂತಿರಂಗ, ಜಯ ಭಾರತ ರಕ್ಷಣಾ ವೇದಿಕೆ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ಬಂದ್‌ ಅನ್ನು ವಿರೋಧಿಸಿ, ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿವೆ.

error: Content is protected !!
Scroll to Top