(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 19. ಸಮಾಜ ಕಲ್ಯಾಣ ಇಲಾಖೆಯ ಪುತ್ತೂರು ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಗಾಯತ್ರಿ ಸಿ.ಎಚ್.ರವರು ಅಬಕಾರಿ ಇಲಾಖೆಯ ಡಿವೈಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಬಾಳೆಕಲ್ಲು ಮನೆತನದ ರಾಮಣ್ಣ ಪೂಜಾರಿ ಮತ್ತು ರತ್ನಾವತಿ ದಂಪತಿಯ ಪುತ್ರಿಯಾಗಿರುವ ಇವರು, ಮಂಗಳೂರಿನ ಬೆಸೆಂಟ್ ಕಾಲೇಜಿನಲ್ಲಿ ಬಿಎ ಪದವಿ ಪಡೆದು ಬಳಿಕ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ LLB ಪದವಿ ಪಡೆದಿದ್ದರು. ನಂತರ ಸಕಲೇಶಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಇವರು, ಕೆಎಎಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕೆಲವು ಸಮಯಗಳ ಹಿಂದೆಯಷ್ಟೇ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಯೋಜನಾ ಸಮನ್ವಯಾಧಿಕಾರಿಯಾಗಿ ಮಂಗಳೂರಿಗೆ ವರ್ಗಾವಣೆಗೊಂಡಿದ್ದ ಇವರು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಬಕಾರಿ ಇಲಾಖೆಯ ಡಿವೈಎಸ್ಪಿಯಾಗಿ ನೇಮಕಗೊಂಡಿದ್ದಾರೆ. ಇವರು ಮೈಸೂರಿನ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸಿದ ಬಳಿಕ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.