ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರು. ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‍ಗಳು, ಐಸ್‍ಕ್ರೀಮ್ ಸ್ಟಿಕ್‍ಗಳು, ಪ್ಲೇಟ್‍ಗಳು, ಕಪ್‍ಗಳು, ಚಮಚಗಳು, ಫೋರ್ಕ್ ಗಳು, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇತ್ಯಾದಿಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರಾದ ಸಂದೀಪ್ ಶೆಣೈ, ವಚನ್ ಶೆಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.

Also Read  2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿ ➤ ಅವಧಿ ವಿಸ್ತರಣೆ

error: Content is protected !!
Scroll to Top