(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.28. ರಾಜ್ಯ ಸರ್ಕಾರದ ಒಂದು ವರ್ಷದ ‘ಜನೋತ್ಸವ’ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮುಂದೂಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಮಧ್ಯರಾತ್ರಿ ತನ್ನ ಆರ್.ಟಿ. ನಗರದ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ಪ್ರವೀಣನ ಹತ್ಯೆಯ ಸುದ್ದಿ ಬಂದಾಗ ಬಹಳ ನೋವು ಉಂಟಾಗಿದೆ. ಓರ್ವ ಅಮಾಯಕನನ್ನು ಅಮಾನವೀಯವಾಗಿ ಕೊಂದಿರುವುದನ್ನು ಸಹಿಸಲು ಸಾಧ್ಯವಿಲ್ಲ. ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಈ ಪ್ರಕರಣವನ್ನು ನಮ್ಮ ಸರ್ಕಾರವು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಆಂಟಿ ಟೆರರಿಸ್ಟ್ ಕಮಾಂಡೊ ಪಡೆಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸರಕಾರವು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜನರಿಗೆ ಆತ್ಮವಿಶ್ವಾಸ ತುಂಬಲು ಆಯೋಜಿಸಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ರದ್ದು ಮಾಡಿದ್ದೇವೆ. ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮವನ್ನೂ ರದ್ದು ಮಾಡಲಾಗಿದ್ದು, ಯಾವುದೇ ಕಾರ್ಯಕ್ರಮ ಇರುವುದಿಲ್ಲ. ಕಾರ್ಯಕ್ರಮಕ್ಕೆ ಬರುವ ಜನರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.