(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಮೊಟ್ಟಮೊದಲ ಬಾರಿಗೆ ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮೇಲೆ ಈ ರೀತಿಯ ಬೃಹತ್ ದಾಳಿ ನಡೆಸಿದೆ.
ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿಮಿಟೆಡ್‌ನ ಕೂಡ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನಿರ್ದೇಶನದ ಮೇರೆಗೆ ಕಬ್ಬಿನ ಅಭಿವೃದ್ಧಿ ಆಯುಕ್ತ ಶಿವಾನಂದ ಎಚ್ ಕಲಕೇರಿ ಮತ್ತು ಸಕ್ಕರೆ ನಿರ್ದೇಶಕರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು ಎಂದು ತಿಳಿದುಬಂದಿದೆ. ಕೆಲವು ಸಕ್ಕರೆ ಕಾರ್ಖಾನೆಗಳು ತೂಕ ಇಳಿಸಿ ರೈತರಿಗೆ ವಂಚನೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆ ದಾಳಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.