(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಬೆಂಗಳೂರಿನಲ್ಲಿ ಚಳಿ ಹಾಗೂ ತುಂತುರು ಮಳೆ ಬೀಳುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿನ್ನೆ ರಾತ್ರಿಯಿಂದಲೇ ಸಿಲಿಕಾನ್ ಸಿಟಿಯಲ್ಲಿ ಜಿಟಿ-ಜಿಟಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಚಳಿಯೂ ಹೆಚ್ಚಳವಾಗಿದೆ. ಜನರು ಮತ್ತೆ ಬೆಚ್ಚನೆಯ ಉಡುಪುಗಳಿಗೆ ಮೊರೆ ಹೋಗಿದ್ದಾರೆ. ಚಳಿ ಹಾಗೂ ಮಳೆಯಿಂದಾಗಿ ಶಾಲೆ, ಕಾಲೇಜು ಮತ್ತು ಕಚೇರಿಗಳಿಗೆ ತೆರಳುವವರಿಗೆ ತೊಂದರೆ ಉಂಟಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಳೆ ದಕ್ಷಿಣ ಒಳನಾಡಿಗೆ ಕಾಲಿಡಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.