(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು, ವಿಶೇಷವಾಗಿ ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿರುವವರಿಗೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳು ಸಾರ್ವಜನಿಕವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಇತರ ತಡೆಗಟ್ಟುವ ಕ್ರಮಗಳನ್ನು ಹಂತಹಂತವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು. ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದ ಬೊಮ್ಮಾಯಿ, ಕಳೆದ ವರ್ಷದಂತೆಯೇ ಇರುತ್ತದೆ ಎಂದರು. ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲವು ಹೆಚ್ಚುವರಿ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.